ಬೆಂಗಳೂರು, ಆಗಸ್ಟ್ 22: ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿತ್ತು. ಈ ವಿಚಾರ ರಾಜಭವನದ ಅಂಗಳಕ್ಕೂ ಹೋಗಿತ್ತು. ನಂತರ ದಯಾಮರಣ ಕೋರಿ ಗುತ್ತಿಗೆದಾರರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ಸಂಬಂಧ ಗುತ್ತಿಗೆದಾರರನ್ನು ವಿಚಾರಣೆ ನಡೆಸಿದ ಪೊಲೀಸರು, ಇದೀಗ ಬಿಬಿಎಂಪಿ (BBMP) ಅಧಿಕಾರಿಗಳನ್ನೂ ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ.
ಗುತ್ತಿಗೆದಾರರ ಪತ್ರದ ಸಂಬಂಧ ಬಿಬಿಎಂಪಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಗುತ್ತಿಗೆದಾರರ ವಿಚಾರಣೆ ವೇಳೆ ಕೆಲವರು ಅಧಿಕಾರಿಗಳ ಮೇಲೆ ಆರೋಪ ಮಾಡಿದ್ದರು ಎನ್ನಲಾಗಿದೆ.
ಕೆಲಸ ಮಾಡಿದ್ದೇವೆ, ಹಣ ಬಿಡುಗಡೆ ಮಾಡಬೇಕು. ಆದರೆ ಇನ್ನೂ ಬಿಡುಗಡೆ ಮಾಡದೆ ಕಾಲಹರಣ ಮಾಡುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಹಣ ಬಿಡುಗಡೆ ಮಾಡುವುದಿಲ್ಲ. ಕೆಲವರು ಸಹಿ ಹಾಕಲು ಹಿಂದೆ ಮುಂದು ನೋಡುತ್ತಾರೆ. ಕೆಲವು ಗುತ್ತಿಗೆದಾರರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಅಂತಹವರಿಗೂ ಹಣ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಾರೆ ಎಂದು ಕೆಲವು ಗುತ್ತಿಗೆದಾರರು ಆರೋಪಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್! ಕಾಮಗಾರಿ ಸ್ಥಗಿತಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಚಿಂತನೆ
ಗುತ್ತಿಗೆದಾರರ ಆರೋಪಗಳ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ನೋಟಿಸ್ ನೀಡಲು ಪೊಲೀಸರು ನಿರ್ಧರಿಸಿದ್ದಾರೆ. ವಿಚಾರಣೆ ನಡೆಸಿದ ನಂತರ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಹೇಳಿಕೆ ಆಧರಿಸಿ ವರದಿ ಸಿದ್ಧಪಡಿಸಲಿದ್ದಾರೆ. ಈ ವರದಿಯನ್ನು ಪೊಲೀಸರು ಸರ್ಕಾರದ ಮುಖ್ಯ ಕಾರ್ಯದರ್ಶಿ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಿದ್ದಾರೆ.
ಸದ್ಯ, ರಾಜ್ಯಪಾಲರಿಗೆ ಪತ್ರ ಬರೆದ ಸಂಬಂಧ ಪೊಲೀಸರು ಗುತ್ತಿಗೆದಾರರ ವಿಚಾರಣೆ ಪೂರ್ಣಗೊಳಿಸಿ ಕಾಮಗಾರಿಗಳ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾಖಲೆ ಪರಿಶೀಲನೆ ಬಳಿಕ ವಿಚಾರಣೆಗೆ ಹಾರಜರಾಗುವಂತೆ ಸಂಬಂಧಪಟ್ಟ ಅಧಿಕಾರಿಳಿಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ