ಮುಂದುವರಿದ ಮಳೆ; ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಐದು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು: ಕರ್ನಾಟಕದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ, ಶಾಲಾ ಕಾಲೇಜುಗಳಿಗೆ (School College Holidays) ನಾಳೆ (ಜುಲೈ 7) ರಜೆ ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅದರಂತೆ ಜಿಲ್ಲೆಯ ಸತತ ನಾಲ್ಕು ದಿನಗಳಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಗ್ರಾಮೀಣ ಅಥವಾ ದೂರದ ಪ್ರದೇಶಗಳಿಂದ ಬರುವ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜಿಗೆ ಬರಲು ಅನಾನುಕೂಲವಾಗುತ್ತಿದ್ದಲ್ಲಿ ಆನ್ಲೈನ್ ಮೂಲಕ ತರಗತಿಗಳನ್ನು ನಡೆಸಲು ಸಂಬಂಧಪಟ್ಟ ವಿದ್ಯಾಸಂಸ್ಥೆಗಳು ಅವಕಾಶ ಕಲ್ಪಿಸಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಕರಾವಳಿ ಭಾಗದಲ್ಲಿ ಮಳೆ, ಉತ್ತರ ಕರ್ನಾಟಕದಲ್ಲಿ ಬರ: ಹವಾಮಾನ ಇಲಾಖೆಯನ್ನು ನಂಬಿಕೊಂಡು ಪ್ಲ್ಯಾನ್ ಮಾಡಬೇಡಿ ಎಂದ ಬೊಮ್ಮಾಯಿ
ಉಡುಪಿ ಜಿಲ್ಲೆಯಲ್ಲಿಯೂ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು, ನಾಳೆ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಸತತ ಮೂರು ದಿನಗಳಿಂದ ಶಾಲಾ ಕಾಲೇಜುಗಳು ಬಂದ್ ಆಗಿವೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಮಲೆನಾಡು ಭಾಗದ ಕೊಪ್ಪ, ಶೃಂಗೇರಿ, ಕಳಸ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಜಾಗರ, ವಸ್ತಾರೆ, ಖಾಂಡ್ಯ, ಆಲ್ದೂರು, ಆವತಿ ಹೋಬಳಿ ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮಳೆ ಮುಂದುವರಿದ ಹಿನ್ನೆಲೆ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಆದೇಶ ಹೊರಡಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:09 pm, Thu, 6 July 23