ಬೆಂಗಳೂರು, ಆಗಸ್ಟ್ 19: ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕಾರ್ಯಕ್ರಮದ ಸ್ಥಳ, ದಿನಾಂಕ ಬದಲಾವಣೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಈಗ ಮೈಸೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದರು.
ಯೋಜನೆಯನ್ನು ಆಗಸ್ಟ್ 27 ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ನಿರ್ಧರಿಸಲಾಗಿತ್ತು. ಸ್ಥಳ ಕೂಡ ನೋಡಲಾಗಿತ್ತು. ಆದರೆ ಆಗಸ್ಟ್ 30 ರಂದು ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಅಂದು ಮೈಸೂರಿನಲ್ಲಿ ಕಾರ್ಯಕ್ರಮ ಆಯೋಜಿಸಿ ಯೋಜನೆಗೆ ಚಾಲನೆ ನೀಡಲಾಗುವುದು. ರಾಹುಲ್ ಗಾಂಧಿಯವರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದರು. ಅನ್ನಭಾಗ್ಯ ಯೋಜನೆ ಬೆಳಗಾವಿಯಲ್ಲಿ ನಡೆಯಬಹುದು ಎಂದರು.
ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆ ಪೋಸ್ಟರ್ ವಿವಾದ; ಮುಸ್ಲಿಂ ಯುವತಿ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಮನಗರ ಬಿಜೆಪಿ ಸದಸ್ಯ
ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜನೆ ಹಿನ್ನೆಲೆ ನಾಳೆ ಮಧ್ಯಾಹ್ನ 12 ಗಂಟೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಪೂರ್ವಭಾವಿ ಸಭೆ ನಡೆಸಲಿರುವ ಅವರು, ನಾಳೆ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ