Bengaluru Rains: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆ
ಕರ್ನಾಟಕದ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ, ಇಂದು ಸಂಜೆಯಿಂದಲೇ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯಲು ಆರಂಭವಾಗಿದೆ. ತುಮಕೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ.
ಬೆಂಗಳೂರು, ಆಗಸ್ಟ್ 19: ಕರ್ನಾಟಕದ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳಲ್ಲಿ ಅಲ್ಲಲ್ಲಿ ಮಳೆಯಾಗುವ (Karnataka Rains) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ, ಇಂದು ಸಂಜೆಯಿಂದಲೇ ರಾಜಧಾನಿ ಬೆಂಗಳೂರಿನಲ್ಲಿ (Bengaluru Rain) ಹಲವೆಡೆ ಮಳೆ ಸುರಿಯಲು ಆರಂಭವಾಗಿದ್ದು, ತುಮಕೂರು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗಿದೆ.
ಬೆಂಗಳೂರು ನಗರದ ವಿಧಾನಸೌಧ, ಶಾಂತಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ಜಯನಗರ, ಲಾಲ್ಬಾಗ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಇನ್ನೂ ಕೆಲವೆಡೆ ತುಂತುರು ಮಳೆಯಾಗುತ್ತಿದ್ದು, ಕೆಲವೊಂದು ಭಾಗಗಳಲ್ಲಿ ಮೋಡಕವಿದ ವಾತಾವರಣ ಇದೆ.
ತುಮಕೂರು ನಗರದಾದ್ಯಂತ ಧಾರಾಕಾರ ಮಳೆ
ತುಮಕೂರು ನಗರದಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಏಕಾಏಕಿಯಾಗಿ ಮಳೆಯಾದ ಹಿನ್ನೆಲೆ ವಾಹನ ಸವಾರರು ಪರದಾಟ ನಡೆಸುವಂತಾಯಿತು. ತುಮಕೂರಿನ ಅಂತರಸನಹಳ್ಳಿ ಬಳಿ ಇರುವ ಅಂಡರ್ಪಾಸ್ ಜಲಾವೃತಗೊಂಡಿದ್ದು, ಖಾಸಗಿ ಬಸ್ವೊಂದು ಇದಲ್ಲಿ ಸಿಲುಕಿದ್ದು, ತೆರವು ಕಾರ್ಯ ನಡೆದಿದೆ. ಈ ಬಾಗದಲ್ಲಿ ಮಳೆ ಬಂದರೆ ಸಾಕು ಅಂಡರ್ಪಾಸ್ನಲ್ಲಿ ಐದಾರು ಅಡಿ ಮಳೆ ನೀರು ತುಂಬಿಕೊಳ್ಳುತ್ತದೆ.
ಕರ್ನಾಟಕದಲ್ಲಿ ಮುಂದಿನ ಐದು ದಿನ ಮಳೆ
ಕರ್ನಾಟಕ ರಾಜ್ಯದಲ್ಲಿ ಮುಂದಿನ 4 ರಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮತ್ತು ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದಾದ್ಯಂತ ಮುಂಗಾರು ಚುರುಕು, ಮುಂದಿನ ಒಂದು ವಾರಗಳ ಕಾಲ ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ
ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಆಗುವ ಸಾಧ್ಯತೆ ಇದೆ. ಒಳನಾಡಿನಲ್ಲಿ ಬಿರುಗಾಳಿ ವೇಗವು ಗಂಟೆಗೆ 30-40 ಕಿ.ಮೀ. ಇರುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಮಳೆ ಹೇಗಿರಲಿದೆ?
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಇದು ಮುಂದಿನ 48 ಗಂಟೆಗಳವರೆಗೆ ಮುಂದುವರಿಯಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ