ಉತ್ತರಾಖಂಡ್, ಆಗಸ್ಟ್ 20: ಖಾಸಗಿ ಬಸ್ (Private bus) ಕಣಿವೆಗೆ ಬಿದ್ದು 7 ಪ್ರಯಾಣಿಕರು ಸಾವನ್ನಪ್ಪಿರುವಂತಹ ಘಟನೆ ಉತ್ತರಕಾಶಿ ಜಿಲ್ಲೆಯ ಗಂಗೋತ್ರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. 35 ಪ್ರಯಾಣಿಕರೊಂದಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಅವಘಡ ಸಂಭವಿಸಿದ್ದು, 27ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಸದ್ಯ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ, 35 ಪ್ರಯಾಣಿಕರಿದ್ದ ಖಾಸಗಿ ಬಸ್ ಗಂಗೋತ್ರಿಯಿಂದ ಉತ್ತರಕಾಶಿ ಕಡೆಗೆ ಹೋಗುತ್ತಿದ್ದಾಗ ಸಂಜೆ 4.05 ಕ್ಕೆ ಆಳವಾದ ಕಣಿವೆಗೆ ಬಿದ್ದಿದೆ ಎನ್ನಲಾಗುತ್ತಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಪೊಲೀಸರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಸದ್ಯ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು, ಆಂಬುಲೆನ್ಸ್‌ಗಳು ಮತ್ತು ಎಸ್‌ಡಿಆರ್‌ಎಫ್ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಗಳು ಧಾವಿಸಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
VIDEO | SDRF carries out rescue operation after a bus fell into a gorge in Uttarakhand’s Uttarkashi. pic.twitter.com/884Ow7MFXq
— Press Trust of India (@PTI_News) August 20, 2023
ಬಸ್ ಚಾಲಕನ ನಿಯಂತ್ರಣ ತಪ್ಪಿರುವುದೆ ಈ ಭೀಕರ ಅಪಘಾತಕ್ಕೆ ಕಾರಣ ಎಂಬುವುದು ಪ್ರಾಥಮಿಕ ತನಿಖೆ ಮೂಲಕ ತಿಳಿದು ಬಂದಿದೆ.
ದೆಹಲಿಯಲ್ಲಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಅಪಘಾತದ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತ ಗತಿಯಲ್ಲಿ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ತರಕಾರಿ ಮಾರುಕಟ್ಟೆಯಲ್ಲಿ ಭಾರತದ UPI ವ್ಯವಸ್ಥೆ ಮೂಲಕ ಹಣ ಪಾವತಿಸಿದ ಜರ್ಮನಿ ಸಚಿವ
ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ವೈದ್ಯಕೀಯ ತಂಡಗಳು ಸದ್ಯ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿವೆ. ಅಗತ್ಯ ಸಂದರ್ಭದಲ್ಲಿ ನೆರವು ನೀಡಲು ಡೆಹ್ರಾಡೂನ್‌ನಲ್ಲಿ ಹೆಲಿಕಾಪ್ಟರ್ ಅನ್ನು ಸಹ ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
ಉತ್ತರಾಖಂಡವು ನಿರಂತರ ಮಳೆಯಿಂದ ತತ್ತರಿಸಿದ್ದು, ಹಲವೆಡೆ ಭೂಕುಸಿತ ಮತ್ತು ಹಠಾತ್ ಪ್ರವಾಹಕ್ಕೂ ಒಳಗಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:09 pm, Sun, 20 August 23