ದಾವಣಗೆರೆ: ಅನ್ನಭಾಗ್ಯ ಯೋಜನೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಶಾಸಕ ಬಿಪಿ ಹರೀಶ್ರಿಗೆ ಜನರ ತರಾಟೆ
ದಾವಣಗೆರೆ ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ನಡೆಯಿತು. ಈ ವೇಳೆ ಅನ್ನಭಾಗ್ಯ ಯೋಜನೆ ಬಗ್ಗೆ ಪ್ರಶ್ನಿಸಿದ ಹರಿಹರದ ಬಿಜೆಪಿ ಶಾಸಕ ಹರೀಶ್ ಅವರನ್ನು ಜನರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ದಾವಣಗೆರೆ, ಆಗಸ್ಟ್ 6: ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ನಡೆದ ಗೃಹ ಜ್ಯೋತಿ ಯೋಜನೆ (Gruha Jyothi Scheme) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಹರಿಹರ ಬಿಜೆಪಿ ಶಾಸಕ ಬಿಪಿ ಹರೀಶ್ (B. P. Harish), ಪ್ರಧಾನಿ ನರೇಂದ್ರ ಮೋದಿ (Narendra Modi) ಕೇಳಿ ಅನ್ನಭಾಗ್ಯ ಘೋಷಣೆ ಮಾಡಿದ್ದಿರಾ ಎಂದು ಪ್ರಶ್ನಿಸಿದರು. ಈ ವೇಳೆ ಶಾಸಕರನ್ನು ಸಭಿಕರು ಆಕ್ಷೇಪ ವ್ಯಕ್ತಪಡಿಸಿದ ತರಾಟೆಗೆ ತೆಗೆದುಕೊಳ್ಳಲು ಆರಂಭಿಸಿದಾಗ ಕಾರ್ಯಕ್ರಮದಲ್ಲಿ ಗದ್ದಲ ಉಂಟಾಯಿತು. ಕೂಡಲೇ ಮಧ್ಯಪ್ರವೇಶಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ (S. S. Mallikarjun), ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದರು. ಜನರ ಆಕ್ರೋಶದ ನಡುವೆಯೂ ಶಾಸಕರು ಭಾಷಣ ಮುಂದುವರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ್, ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡುವುದಾಗಿ ಮೊದಲು ಕೇಂದ್ರ ಸರ್ಕಾರ ಹೇಳಿತ್ತು. ನಂತರ ಯಥನಾಲ್ ತಯಾರಿಸಲು ಬೇಕು ಎಂದು ಕಾರಣ ಹೇಳಿ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಆರೋಪಿಸಿದರು. ಕೋವಿಡ್ ಸಂಕಷ್ಟದಲ್ಲಿ ಗಂಟೆ ಹೊಡೆಯುವಂತೆ ಹೇಳಿದ ಪ್ರಧಾನಿ ಯಾವುದೇ ಸಹಾಯ ಮಾಡಲಿಲ್ಲ. ಈಗ ನಾವು ಚುನಾವಣೆಯಲ್ಲಿ ನೀಡಿದ ಭರವಸೆ ನೀಡಿದಂತೆ ಅವುಗಳನ್ನ ಪೂರೈಕೆ ಮಾಡುತ್ತಿದ್ದೇವೆ. ಇದರ ಬಗ್ಗೆ ಇಲ್ಲ ಸಲ್ಲ ಆರೋಪ ಮಾಡುವುದು ಸರಿಯಲ್ಲ ಎಂದರು.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ